ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿ ಆರೇಳು ಜನರ ಗುಂಪು ಸುಮಾರು ಒಂದು ಗಂಟೆ ಕಾಲ ಮನಬಂದಂತೆ ಥಳಿಸಿರುವ ಆರೋಪ ಕೇಳಿಬಂದಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಹುಬ್ಬಳ್ಳಿ ಹೊರವಲಯದ ತಾರಿಹಾಳ ರಾಮನಗರದಲ್ಲಿ ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು 25 ವರ್ಷದ ಸುರೇಶ್ ವಾಲ್ಮೀಕಿ ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಸುರೇಶ್ ತಾರಿಹಾಳದ ಬಳಿ ತೆರಳಿದ್ದ ವೇಳೆ ಮಾರುತಿ, ರವಿ, ರಾಹುಲ್, ರತನ್ ಸೇರಿದಂತೆ ಆರೇಳು ಮಂದಿ ಆತನನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದಿದ್ದಾರೆ ಎನ್ನಲಾಗಿದೆ. ಬಳಿಕ ರಾಮನಗರದಲ್ಲಿರುವ ಆರೋಪಿಗಳ ಮನೆಯ ಹತ್ತಿರ ಕರೆದೊಯ್ದು ಸುಮಾರು ಒಂದು ಗಂಟೆ ಕಾಲ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಹಲ್ಲೆಯಿಂದ ಸುರೇಶ್ ಅವರ ಕಣ್ಣು, ಹೊಟ್ಟೆ ಹಾಗೂ ಕಾಲುಗಳ ಭಾಗದಲ್ಲಿ ಗಂಭೀರ ಗಾಯಗಳಾಗಿವೆ. ತೀವ್ರವಾಗಿ ಗಾಯಗೊಂಡಿರುವ ಆತನನ್ನು ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾನೆ .
ಕ್ಷುಲ್ಲಕ ಕಾರಣ ಅಥವಾ ಹಿಂದಿನ ವೈಷಮ್ಯದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಆರೇಳು ಮಂದಿ ಸೇರಿಕೊಂಡು ಯುವಕನ ಮೇಲೆ ಹಲ್ಲೆ ನಡೆಸಿರುವ ಆರೋಪ ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ.
ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಸಂಪೂರ್ಣ ಹಿನ್ನೆಲೆ ಹಾಗೂ ಹಲ್ಲೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದವರ ಪಾತ್ರದ ಕುರಿತು ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.